ಡಿ.ಸಿ.ಪ್ರಕಾಶ್, ಸಂಪಾದಕರು
ಚಿತ್ರದುರ್ಗ: ಮಾಜಿ ಸಚಿವ ದಿವಂಗತ ಡಿ.ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇದೀಗ ರಾಜಕೀಯ ಕುತೂಹಲದ ಕೇಂದ್ರವಾಗಿದೆ. ಕಾಂಗ್ರೆಸ್ನಿಂದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದೆಡೆಯಾದರೆ, ಬಿಜೆಪಿ ಮತ್ತು ಜೆಡಿಎಸ್ ಒಳಗೊಂಡ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ಮತ್ತೊಂದೆಡೆ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗದಿದ್ದರೂ, ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಕಾಂಗ್ರೆಸ್ ಟಿಕೆಟ್ಗಾಗಿ ದಿವಂಗತ ಡಿ.ಸುಧಾಕರ್ ಅವರ ಕುಟುಂಬದ ಸದಸ್ಯರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಅವರ ಪತ್ನಿ ಹರ್ಷಿಣಿ, ಪುತ್ರ ಸುಹಾಸ್, ಅಳಿಯ ನಿತೀಶ್ ಹಾಗೂ ಪುತ್ರಿ ಸ್ಪೂರ್ತಿ ಅವರ ಹೆಸರುಗಳನ್ನು ಸುಧಾಕರ್ ಬೆಂಬಲಿಗರು ರಾಜಕೀಯ ವಲಯದಲ್ಲಿ ತೇಲಿಬಿಟ್ಟಿದ್ದಾರೆ. ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ ಮೇಲೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯವೂ ಬೆಂಬಲಿಗರ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಆದರೆ ಕಾಂಗ್ರೆಸ್ನಲ್ಲಿ ಟಿಕೆಟ್ಗಾಗಿ ಕುಟುಂಬದ ಹೊರತಾಗಿಯೂ ಪ್ರಬಲ ಆಕಾಂಕ್ಷಿಯೊಬ್ಬರ ಹೆಸರು ಮುಂಚೂಣಿಯಲ್ಲಿದೆ. ಅವರೇ ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್.
ಪೂರ್ಣಿಮಾ ಶ್ರೀನಿವಾಸ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. 2023ರ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಡಿ.ಸುಧಾಕರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರ ಪತಿ ಶ್ರೀನಿವಾಸ್ ಅವರು ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವುದು ಕೂಡ ರಾಜಕೀಯವಾಗಿ ಅವರ ಕುಟುಂಬದ ಪ್ರಭಾವವನ್ನು ಹೆಚ್ಚಿಸಿದೆ. ಹೀಗಾಗಿ, ಸುಧಾಕರ್ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡದಿದ್ದರೆ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ.
ಕಾಂಗ್ರೆಸ್ನಲ್ಲಿ ಸುಹಾಸ್ ಹೆಸರು ಮುಂಚೂಣಿಗೆ?
ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ, ಡಿ.ಸುಧಾಕರ್ ಅವರ ಪುತ್ರ ಸುಹಾಸ್ ಅವರ ಹೆಸರು ಕಾಂಗ್ರೆಸ್ ವಲಯದಲ್ಲಿ ಹೆಚ್ಚು ಮುಂಚೂಣಿಗೆ ಬಂದಿದೆ. ಹಿರಿಯೂರಿನಲ್ಲಿ ನಡೆದ ಪಕ್ಷದ ಸಭೆಯೊಂದರಲ್ಲಿ ಸುಹಾಸ್ ಹೆಸರನ್ನು ಪ್ರಸ್ತಾಪಿಸಿದಾಗ ಕಾರ್ಯಕರ್ತರಿಂದ ಬೆಂಬಲ ವ್ಯಕ್ತವಾಗಿದೆ ಎಂಬ ವರದಿಗಳೂ ಪ್ರಕಟವಾಗಿವೆ. ಮತ್ತೊಂದೆಡೆ, ಮುಖ್ಯಮಂತ್ರಿ ಡಿ.ಕೆ.ವಕುಮಾರ್ ಅವರು ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ನಾಲ್ಕು ಪ್ರತ್ಯೇಕ ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ ಮತ್ತು ಅವುಗಳ ಆಧಾರದ ಮೇಲೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ನವೆಂಬರ್ 11ರಂದು ಸಚಿವ ಟಿ.ರಘುಮೂರ್ತಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಎನ್.ಚಂದ್ರಪ್ಪ ಅವರೊಂದಿಗೆ ಉಪಚುನಾವಣೆಯ ಸಿದ್ಧತೆ ಕುರಿತು ಚರ್ಚಿಸಿರುವುದು ಕಾಂಗ್ರೆಸ್ ಈ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿರುವುದನ್ನು ಸೂಚಿಸುತ್ತದೆ.
ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದ ಅಟ್ಟಿಕಾ ಗೋಲ್ಡ್ ಬೊಮ್ಮನಹಳ್ಳಿ ಬಾಬು!
ಇನ್ನೊಂದೆಡೆ, ಅಟ್ಟಿಕಾ ಗೋಲ್ಡ್ ಕಂಪನಿಯ ಸಂಸ್ಥಾಪಕ ಬೊಮ್ಮನಹಳ್ಳಿ ಬಾಬು ಅವರು ಹಿರಿಯೂರು ಉಪಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಜನರೊಂದಿಗೆ ಸಂಪರ್ಕ ಬೆಳೆಸುತ್ತಿದ್ದು, ಸ್ಥಳೀಯವಾಗಿ ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಸಂಘಟಿಸುತ್ತಿದ್ದಾರೆ. ನವೆಂಬರ್ 4ರಂದು ಹಿರಿಯೂರಿನಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರು ಭಾಗವಹಿಸಿದ್ದರು.
ಅಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬೊಮ್ಮನಹಳ್ಳಿ ಬಾಬು, ಯಾವುದೇ ರಾಜಕೀಯ ಪಕ್ಷದ ಬೆಂಬಲವಿಲ್ಲದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉದ್ದೇಶ ಹೊಂದಿರುವುದಾಗಿ ಹೇಳಿದ್ದರು. ಕ್ಷೇತ್ರದ ಅಭಿವೃದ್ಧಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉದ್ಯೋಗಾವಕಾಶ ಕಲ್ಪಿಸುವುದು ತಮ್ಮ ಆದ್ಯತೆಗಳೆಂದು ತಿಳಿಸಿದ್ದಾರೆ.
ಆದರೆ, ಅವರನ್ನು ಎನ್ಡಿಎ ಮೈತ್ರಿಕೂಟದ ಬೆಂಬಲದೊಂದಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ರಾಜಕೀಯ ಚರ್ಚೆಯೂ ಕೇಳಿಬರುತ್ತಿದೆ. ಈ ಸಂಬಂಧ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆದಿದೆ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರೂ ಒಲವು ತೋರಿದ್ದಾರೆ ಎಂಬ ಮಾತುಗಳಿವೆ. ಹೀಗಾಗಿ ಬೊಮ್ಮನಹಳ್ಳಿ ಬಾಬು ಸ್ವತಂತ್ರ ಅಭ್ಯರ್ಥಿಯಾಗಿಯೇ ಉಳಿಯುತ್ತಾರೆಯೇ ಅಥವಾ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.
ಬಿಜೆಪಿ–ಜೆಡಿಎಸ್ ನಡುವೆ ಕ್ಷೇತ್ರದ ಟಿಕೆಟ್ಗಾಗಿ ಪೈಪೋಟಿ!
ಹಿರಿಯೂರು ಕ್ಷೇತ್ರವನ್ನು ತಮ್ಮ ಪಕ್ಷಕ್ಕೆ ಬಿಟ್ಟುಕೊಡಬೇಕೆಂದು ಜೆಡಿಎಸ್ ನಾಯಕರು ಆರಂಭದಿಂದಲೂ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಜೆಡಿಎಸ್ಗೆ ಉತ್ತಮ ಸಂಘಟನಾ ಶಕ್ತಿಯಿದ್ದು, ಪಕ್ಷದ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂಬ ನಿಲುವು ಹೊಂದಿದ್ದಾರೆ. ಮತ್ತೊಂದೆಡೆ, ಬಿಜೆಪಿ ನಾಯಕರು ಕೂಡ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಆಸಕ್ತಿ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್ ನಡುವೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದವು. ಬಿಜೆಪಿಯ ರಾಜ್ಯ ಘಟಕವು ಮೂವರು ಆಕಾಂಕ್ಷಿಗಳ ಹೆಸರನ್ನು ಶಿಫಾರಸು ಮಾಡಿದೆ ಎಂಬ ವರದಿಗಳೂ ಪ್ರಕಟವಾಗಿವೆ.
ಆದರೆ, ನವೆಂಬರ್ 16ರಂದು ಈ ಕುರಿತು ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಅವರು ಮೈತ್ರಿಕೂಟದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪರಸ್ಪರ ಸಮಾಲೋಚನೆ ನಡೆಸಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ದಿನಾಂಕಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳು!
ಮಾಜಿ ಸಚಿವ ಡಿ.ಸುಧಾಕರ್ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ 92,050 ಮತಗಳನ್ನು ಪಡೆದು, ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್ ಅವರನ್ನು 30,322 ಮತಗಳ ಅಂತರದಿಂದ ಸೋಲಿಸಿದ್ದರು. ಈಗ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇತ್ತೀಚಿನ ವಿಧಾನ ಪರಿಷತ್ ಚುನಾವಣೆಗಳಲ್ಲಿ ಎನ್ಡಿಎ ಉತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಹಿರಿಯೂರು ಉಪಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಎರಡಕ್ಕೂ ಮಹತ್ವದ ರಾಜಕೀಯ ಪರೀಕ್ಷೆಯಾಗಲಿದೆ.
ಮೇ 10ರಂದು ಡಿ.ಸುಧಾಕರ್ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಕ್ಷೇತ್ರಕ್ಕೆ ಆರು ತಿಂಗಳೊಳಗೆ ಉಪಚುನಾವಣೆ ನಡೆಸಬೇಕಾದ ನಿಯಮವಿದ್ದರೂ, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಚುನಾವಣಾ ವೇಳಾಪಟ್ಟಿ ವಿಳಂಬವಾಗಿದೆ ಎಂದು ವರದಿಯಾಗಿದೆ. ನವೆಂಬರ್ 16ರ ವೇಳೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿಲ್ಲ.
ಒಟ್ಟಿನಲ್ಲಿ, ಕಾಂಗ್ರೆಸ್ನಲ್ಲಿ ಸುಧಾಕರ್ ಕುಟುಂಬದ ವಾರಸುದಾರರಿಗೆ ಟಿಕೆಟ್ ನೀಡಬೇಕೆಂಬ ಒತ್ತಡ, ಪೂರ್ಣಿಮಾ ಶ್ರೀನಿವಾಸ್ ಅವರ ರಾಜಕೀಯ ಆಕಾಂಕ್ಷೆ, ಬೊಮ್ಮನಹಳ್ಳಿ ಬಾಬು ಅವರ ಸ್ವತಂತ್ರ ಸ್ಪರ್ಧೆಯ ಸಿದ್ಧತೆ ಹಾಗೂ ಬಿಜೆಪಿ-ಜೆಡಿಎಸ್ ನಡುವಿನ ಅಭ್ಯರ್ಥಿ ಆಯ್ಕೆಯ ಕಸರತ್ತು ಹಿರಿಯೂರು ರಾಜಕೀಯವನ್ನು ರಂಗೇರಿಸಿವೆ.
ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ರಾಜಕೀಯ ಲೆಕ್ಕಾಚಾರಗಳು ಇನ್ನಷ್ಟು ಸ್ಪಷ್ಟವಾಗಲಿವೆ. ಆದರೆ ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯ ಹಂತದಲ್ಲೇ ಭಾರಿ ಕುತೂಹಲ ಮತ್ತು ಗೊಂದಲಕ್ಕೆ ಕಾರಣವಾಗಿದೆ.














