ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿರುವ ಹಿನ್ನೆಲೆ, ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ವತಿಯಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಸಂಸತ್ ಚಲೋ’ ಪ್ರತಿಭಟನೆ ನಡೆಸಲಾಯಿತು.
ಜಂತರ್ ಮಂತರ್‌ನಿಂದ ಆರಂಭವಾದ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಹಲವಾರು ರಾಜಕೀಯ ನಾಯಕರು ಭಾಗವಹಿಸಿದರು. ಪ್ರತಿಭಟನಾ ಸ್ಥಳದಲ್ಲಿ ನಟಿ ಶಬಾನಾ ಅಜ್ಮಿ, ಆಜಾದ್ ಸಮಾಜ ಪಾರ್ಟಿ–ಕಾನ್ಶಿರಾಮ್ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ವಾಗ್ವಾದ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ಗುಂಪನ್ನು ಚದುರಿಸಲು ಪೊಲೀಸರು ಹಾಗೂ ಆರ್‌ಪಿಎಫ್ (RPF) ಸಿಬ್ಬಂದಿ ಲಾಠಿಚಾರ್ಜ್ ನಡೆಸಿದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪ್ರತಿಭಟನಾ ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.














