ಹಾಸನ: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮ ಅವರ ಅಂತ್ಯಸಂಸ್ಕಾರವು ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಅಂತ್ಯಸಂಸ್ಕಾರದ ವೇಳೆ ಸರ್ಕಾರಿ ಗೌರವದ ಅಂಗವಾಗಿ ರಾಷ್ಟ್ರಧ್ವಜವನ್ನು ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸುವ ಮೂಲಕ ಅಂತಿಮ ಗೌರವ ಸಲ್ಲಿಸಲಾಯಿತು. ಕುಟುಂಬ ಸದಸ್ಯರು, ರಾಜಕೀಯ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಶ್ರೀಮತಿ ಚನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಶ್ರೀಮತಿ ಚೆನ್ನಮ್ಮ ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.














