ಬೆಂಗಳೂರು, ಆ. 2026: ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಬೆಂಗಳೂರನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಇಂದು ಅಧಿಕೃತ ಚಾಲನೆ ನೀಡಿದೆ.

ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಅಭಿಯಾನದಡಿ ಕಟ್ಟಡ ನಿರ್ಮಾಣ ತ್ಯಾಜ್ಯ, ಘನ ತ್ಯಾಜ್ಯ, ಹಳೆಯ ವಿದ್ಯುತ್ ಕಂಬಗಳು, ಪೈಪ್‌ಗಳು, ಮಣ್ಣಿನ ಗುಡ್ಡೆಗಳು, ಬೆಳೆದ ಕಳೆಗಿಡಗಳು ಹಾಗೂ ಮರದ ಕೊಂಬೆಗಳು ಸೇರಿದಂತೆ ಒಟ್ಟು 22,372 ಟನ್ ತ್ಯಾಜ್ಯವನ್ನು ತೆರವುಗೊಳಿಸುವ ಗುರಿ ಹೊಂದಲಾಗಿದೆ.

ಬೆಂಗಳೂರು ನಗರದ ಪ್ರಮುಖ ರಸ್ತೆಗಳು, ಮೇಲ್ಸೇತುವೆಗಳು, ಪಾದಚಾರಿ ಮಾರ್ಗಗಳು ಹಾಗೂ ಸಾರ್ವಜನಿಕ ಸ್ಥಳಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದೊಂದಿಗೆ ತ್ಯಾಜ್ಯ ಮುಕ್ತ ಬೆಂಗಳೂರು ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಎ.ಸಿ.ಶ್ರೀನಿವಾಸ್, ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.














