ಜಮುಯಿ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿ ವಿದ್ಯಾರ್ಥಿಯನ್ನು ಗುಂಪೊಂದು ಮಾರ್ಗಮಧ್ಯೆ ತಡೆದು ಹಲ್ಲೆ ನಡೆಸಿ, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 19ರ ಸಂಜೆ ಟ್ಯೂಷನ್ ಮುಗಿಸಿಕೊಂಡು ಇಬ್ಬರೂ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಜಮುಯಿ ಸಮೀಪದ ಪ್ರದೇಶದಲ್ಲಿ ಕೆಲವರು ಅವರನ್ನು ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಪು ವಿದ್ಯಾರ್ಥಿಯನ್ನು ಥಳಿಸಿ, ಇಬ್ಬರನ್ನೂ ಸುತ್ತುವರಿದು ಬೆದರಿಕೆ ಹಾಕಿದೆ. ಬಳಿಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯನ್ನು ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದ ಎನ್ನಲಾಗಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ನಂತರ ಜಮುಯಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳು ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈವರೆಗೆ ಮೂವರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗಾಗಿ ವಿಶೇಷ ತನಿಖಾ ತಂಡ (SIT) ರಚಿಸಿ ಶೋಧ ನಡೆಸಲಾಗುತ್ತಿದೆ ಎಂದು ಜಮುಯಿ ಪೊಲೀಸ್ ವರಿಷ್ಠಾಧಿಕಾರಿ ವಿಶ್ವಜೀತ್ ದಯಾಳ್ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳ ಜಮುಯಿ ಪಟ್ಟಣದಿಂದ ಸುಮಾರು 3 ಕಿ.ಮೀ ದೂರದಲ್ಲಿದ್ದು, ಸಂಜೆ 6.15ರಿಂದ 6.30ರ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಎಂದು ಬಿಹಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಗಸ್ತು ಪೊಲೀಸ್ ಸಿಬ್ಬಂದಿಯ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಈ ಘಟನೆಗೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಜಮುಯಿನಿಂದ ಹೊರಬಂದಿರುವ ವಿಡಿಯೋ ಅತ್ಯಂತ ಆತಂಕಕಾರಿ ಎಂದು ಹೇಳಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಸುರಕ್ಷಿತವಾಗಿರಲು ಸಾಧ್ಯವಾಗದ ಪರಿಸ್ಥಿತಿ ಏಕೆ ನಿರ್ಮಾಣವಾಗಿದೆ ಎಂಬುದಕ್ಕೆ ಬಿಹಾರ ಸರ್ಕಾರ ಉತ್ತರಿಸಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಮುಂದುವರಿದಿದೆ.













