ಬೆಂಗಳೂರು: ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಮೋಹನ್ ಬಾಬು ಅವರ ನೇತೃತ್ವದಲ್ಲಿ ಹೊರಮಾವು-ಅಗರ ವಾರ್ಡ್ನ ಮುಖಂಡರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಹೆಚ್ಚುವರಿ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ಭೇಟಿಯಾಗಿ, ಪ್ರದೇಶದ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸಿದರು.
ಬಂಜಾರ ಮುಖ್ಯ ರಸ್ತೆಯ ಒಳಚರಂಡಿ ಸಮಸ್ಯೆ, ಸಂಚಾರ ದಟ್ಟಣೆ, ಫುಟ್ಪಾತ್ಗಳ ಒತ್ತುವರಿ, ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ವಿಚಾರ ಹಾಗೂ ಹೊರಮಾವು-ಅಗರ ಕೆರೆಯ ಸಮೀಪದ ಒಳಚರಂಡಿ ಸಮಸ್ಯೆ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಯಿತು.
ಮುಖಂಡರು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಕೂಲಂಕಷವಾಗಿ ಆಲಿಸಿದ ಹೆಚ್ಚುವರಿ ಆಯುಕ್ತರು, ಅವುಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಕುರಿತು ಮಾತನಾಡಿದ ಸಮಾಜ ಸೇವಕರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್ ಅವರು, “ಸಾರ್ವಜನಿಕ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳುವುದು ಮತ್ತು ಎಲ್ಲರಿಗೂ ಉತ್ತಮವಾದ ಹೊರಮಾವು-ಅಗರ ಪ್ರದೇಶವನ್ನು ರೂಪಿಸುವುದು ನಮ್ಮ ಮುಖ್ಯ ಗುರಿಯಾಗಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೋದಂಡರಾಮು ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.














