ಡಿ.ಸಿ.ಪ್ರಕಾಶ್, ಸಂಪಾದಕರು
ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಸಾರ್ವಜನಿಕರ ಕ್ಷಮೆ ಕೇಳಿ ಅವುಗಳನ್ನು ರದ್ದುಗೊಳಿಸಬೇಕು ಹಾಗೂ ಬೆಲೆ ಏರಿಕೆಗಳನ್ನು ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಆದರೆ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ಆರಂಭದಿಂದಲೂ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತಲೇ ಬಂದಿವೆ. ಬಡವರು ಮತ್ತು ಸಾಮಾನ್ಯ ಜನರಿಗೆ ಉಚಿತವಾಗಿ ಸರ್ಕಾರಿ ಸವಲತ್ತುಗಳನ್ನು ಒದಗಿಸುವುದನ್ನು ಈ ಪಕ್ಷಗಳು ಸಹಿಸಿಕೊಳ್ಳುತ್ತಿಲ್ಲ.
ವಿಪರ್ಯಾಸವೆಂದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿರಂತರವಾಗಿ ಟೀಕಿಸುತ್ತಾ ಬಂದಿರುವ ಬಿಜೆಪಿ, ಇದೇ ಮಾದರಿಯ ಜನಪ್ರಿಯ ಯೋಜನೆಗಳನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡು ಇತರ ರಾಜ್ಯಗಳ ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ಪ್ರಯತ್ನಿಸಿದೆ. ಅಂದರೆ, ಕಾಂಗ್ರೆಸ್‌ನ ಗ್ಯಾರಂಟಿ ಮಾದರಿಯನ್ನು ವಿರೋಧಿಸುವ ಬಿಜೆಪಿಯೇ ಚುನಾವಣಾ ಲಾಭಕ್ಕಾಗಿ ಅದೇ ಮಾದರಿಯನ್ನು ಅನುಸರಿಸುತ್ತಿದೆ ಎಂಬುದು ಇಡೀ ದೇಶಕ್ಕೆ ಗೊತ್ತು.
ಇಂದು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತಿರುವ ಬಿಜೆಪಿ, ನಾಳೆ ಚುನಾವಣೆ ಎದುರಾದಾಗ ಇದಕ್ಕಿಂತಲೂ ಹೆಚ್ಚಿನ ಉಚಿತ ಯೋಜನೆಗಳನ್ನು ಘೋಷಿಸುವುದಿಲ್ಲ ಎಂಬುದಕ್ಕೆ ಏನು ಖಾತರಿ? ಅಧಿಕಾರಕ್ಕಾಗಿ ಒಂದು ನಿಲುವು, ವಿರೋಧಪಕ್ಷದಲ್ಲಿದ್ದಾಗ ಮತ್ತೊಂದು ನಿಲುವು ಎಂಬ ರಾಜಕೀಯ ದ್ವಂದ್ವವೇಕೆ?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಬದುಕಿನ ಭದ್ರತೆ ಒದಗಿಸುತ್ತಿವೆ. ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಸವಾಲುಗಳನ್ನು ಸರಿಪಡಿಸಿಕೊಂಡು ಅವುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.
ಬಡವರ ಬದುಕಿಗೆ ಆಸರೆಯಾಗಿರುವ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುಂದುವರಿಯಲಿ. ಜನಕಲ್ಯಾಣದ ಯೋಜನೆಗಳನ್ನು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ನೋಡುವ ಬದಲು, ಜನರ ಬದುಕಿನ ದೃಷ್ಟಿಕೋನದಿಂದ ನೋಡುವ ಮನೋಭಾವ ರಾಜಕೀಯ ಪಕ್ಷಗಳಲ್ಲಿ ಬೆಳೆಯಲಿ.














