ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಚಾರವಾಗಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಮತ್ತು ಕಾಂಗ್ರೆಸ್ನ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ನಡುವೆ ನಡೆದಿದ್ದ ಬಹಿರಂಗ ವಾಗ್ವಾದ ಇದೀಗ ರಾಜಕೀಯ ಸಂಘರ್ಷಕ್ಕೆ ತಿರುಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ರಾಮಮೂರ್ತಿನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಟಿನ್ ಫ್ಯಾಕ್ಟರಿ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ‘ವಾರ್ಡ್ ಒನ್ ಅಭಿಯಾನ’ದ ಎರಡನೇ ಹಂತಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಸಚಿವರನ್ನು ಸ್ವಾಗತಿಸಲು ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆಗಳು, ಅಭಿವೃದ್ಧಿ ಕಾಮಗಾರಿಗಳ ವಿಳಂಬ ಸೇರಿದಂತೆ ಹಲವು ನಾಗರಿಕ ಸಮಸ್ಯೆಗಳಿಗೆ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಆರೋಪಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಶಾಸಕರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಬೈರತಿ ಬಸವರಾಜ್ ತಿರುಗೇಟು ನೀಡಿದ ಪರಿಣಾಮ ಇಬ್ಬರ ನಡುವೆ ಸಾರ್ವಜನಿಕರ ಎದುರೇ ಮಾತಿನ ಚಕಮಕಿ ನಡೆದಿತ್ತು. ಪರಿಸ್ಥಿತಿ ಕೈಮೀರುವ ಸಾಧ್ಯತೆಯನ್ನು ಅರಿತ ಸಚಿವ ಕೃಷ್ಣ ಬೈರೇಗೌಡ ಹಾಗೂ ಪೊಲೀಸರು ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ದೂರು ಸಲ್ಲಿಸಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಇಂದು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ರಾಮಮೂರ್ತಿನಗರ ಪೊಲೀಸ್ ಠಾಣೆಯವರೆಗೆ ಮೆರವಣಿಗೆ ನಡೆಸಿದರು.

ಠಾಣೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಶಾಸಕ ಬೈರತಿ ಬಸವರಾಜ್ ಅವರ ಭಾವಚಿತ್ರಗಳನ್ನು ದಹಿಸಿ, ಅವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಶಾಸಕರ ವಿರುದ್ಧ ಪ್ರತಿ ದೂರು ದಾಖಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ನಾಯಕರ ಉಪಸ್ಥಿತಿ
ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಕೋದಂಡರಾಮ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರಮಾವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ವೆಂಕಟೇಶ್, ಉದಯನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರುಳಪ್ಪ, ಮಾಜಿ ಕಾರ್ಪೊರೇಟರ್ ಅಮಾನುಲ್ಲಾ, ಹಿರಿಯ ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಕೆ.ಆರ್.ಪುರಂ ನಗರಸಭೆಯ ಮಾಜಿ ಅಧ್ಯಕ್ಷೆ ಸಾಕಮ್ಮ ರಾಮಯ್ಯ, ಕ್ಷೇತ್ರದ ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯರಾಂ, ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಬಶೀರ್ ಜಾಮಾದಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಆರ್. ಪುರುಷೋತ್ತಮ್ ಬಾಬು ಸೇರಿದಂತೆ ಬ್ಲಾಕ್ ಹಾಗೂ ವಾರ್ಡ್ ಮಟ್ಟದ ಕಾಂಗ್ರೆಸ್ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಆರಂಭವಾದ ವಾಗ್ವಾದ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿಸಿದೆ.














